ವಿಜ್ಞಾನ ಕೇಂದ್ರಗಳು

ವಿಜ್ಞಾನ ಮತ್ತು ತಂತ್ರಜ್ಞಾನ ಆವಿಷ್ಕಾರಗಳನ್ನು ಜನಸಾಮಾನ್ಯರಿಗೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ, ಚಿಂತನೆ ಮತ್ತು ವೈಚಾರಿಕತೆಗಳನ್ನು ಬೆಳೆಸುವ ಉದ್ದೇಶದೊಂದಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಜ್ಯಾದ್ಯಂತ ವಿವಿಧ ಪ್ರದೇಶಗಳಲ್ಲಿ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳುತ್ತಿದೆ. ಈ ಕೇಂದ್ರಗಳು ‘ನೋಡಿ ಕಲಿ, ಮಾಡಿ ತಿಳಿ’ ಪರಿಕಲ್ಪನೆಯ ಕಲಿಕೆಯಾಧಾರಿತವಾಗಿದ್ದು, ಪ್ರಾತ್ಯಕ್ಷಿಕೆ/ಮಾದರಿಗಳ ಮೂಲಕ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಜನಸಾಮಾನ್ಯರಲ್ಲಿ ವಿಜ್ಞಾನದಲ್ಲಿ ಆಸಕ್ತಿ, ವೈಜ್ಞಾನಿಕ ಮನೋಭಾವ ಹಾಗೂ ಸೃಜನಾತ್ಮಕತೆಯನ್ನು ಅಭಿವೃದ್ಧಿಪಡಿಸಲು ಸಹಕಾರಿಯಾಗಲಿವೆ.     
ಈ ವಿಜ್ಞಾನ ಕೇಂದ್ರಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುತ್ತಿದ್ದು, ಇವುಗಳನ್ನು ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಅಥವಾ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಎಂದು ಕರೆಯಲಾಗುತ್ತವೆ. ಪ್ರಾದೇಶೀಕ ವಿಜ್ಞಾನ ಕೇಂದ್ರಗಳು ದೊಡ್ಡ ಮಟ್ಟದ ಕೇಂದ್ರಗಳಾಗಿದ್ದು, ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಸಮಪಾಲಿನ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುತ್ತಿವೆ. ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ದ್ಯೇಯೋದ್ಧೇಶಗಳನ್ನೇ ಹೊಂದಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಸಣ್ಣ ಪ್ರಮಾಣದ ಕೇಂದ್ರ್ರಗಳಾಗಿವೆ. ಈ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ರಾಜ್ಯ ಸರ್ಕಾರದ ಸಂಪೂರ್ಣ ಅನುದಾನದೊಂದಿಗೆ ಸ್ಥಾಪಿಸಲಾಗುತ್ತಿದೆ. ಪ್ರಸ್ತುತ, ರಾಜ್ಯದಲ್ಲಿ 3 ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ 22 ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗುತ್ತಿದೆ.